* ಅವರ ಮಾತುಗಳು:*
ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ಬೇಷರತ್ ಬೆಂಬಲ ನೀಡಿತ್ತು. ಆದರೆ ಕುಮಾರಸ್ವಾಮಿ ಅವರು ಅಧಿಕಾರ ಉಳಿಸಿಕೊಳ್ಳಲಿಲ್ಲ. ಮುಂದಿನ ಬಾರಿ ಜೆಡಿಎಸ್ ಹಾಗೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ.
ರೈತನಿಗೆ ಸಂಬಳ, ಬಡ್ತಿ, ನಿವೃತ್ತಿ, ಪಿಂಚಣಿ, ಲಂಚ ಯಾವುದೂ ಇಲ್ಲ. ರೈತರ ಹಿತ ಕಾಯಲು ಕಾಂಗ್ರೆಸ್ ಸರ್ಕಾರ ವಿಶೇಷ ಯೋಜನೆ ರೂಪಿಸಿದೆ. ಕಾಂಗ್ರೆಸ್ ಪಕ್ಷ ಜನರಿಗೆ ನೆರವಾಗಲು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ ಪ್ರತಿ ತಿಂಗಳು 200 ಯುನಿಟ್ ವಿದ್ಯುತ್ ಉಚಿತ. ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರದಂತೆ ವರ್ಷಕ್ಕೆ 24 ಸಾವಿರ ಪ್ರೋತ್ಸಾಹ ನೀಡುತ್ತೇವೆ, ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿ ಉಚಿತ ನೀಡಲಾಗುವುದು. ರಾಜ್ಯದ ಮಹಿಳೆಯರಿಗೆ ಸಾರ್ವಜನಿಕ ಬಸ್ ಗಳಲ್ಲಿ ಉಚಿತ ಪ್ರಯಾಣ, ಯುವನಿಧಿ ಯೋಜನೆ ಮೂಲಕ ನಿರುದ್ಯೋಗಿ ಪದವೀಧರರಿಗೆ 3 ಸಾವಿರ, ಡಿಪ್ಲೋಮಾ ಪದವೀಧರರಿಗೆ 1500 ರೂ ಪ್ರತಿ ತಿಂಗಳು 2 ವರ್ಷಗಳ ಕಾಲ ನಿರುದ್ಯೋಗ ಭತ್ಯೆ ನೀಡಲಾಗುವುದು. ಇವು ನಮ್ಮ ಐದು ಗ್ಯಾರಂಟಿ ಯೋಜನೆಗಳು. ಈ ಎಲ್ಲಾ ಯೋಜನೆಗಳನ್ನು ಸರ್ಕಾರ ಬಂದ ಮೊದಲ ಸಚಿವ ಸಂಪುಟದಲ್ಲೇ ಜಾರಿ ಮಾಡಲಾಗುವುದು.
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ.
ಜೆಡಿಎಸ್ ಹಾಗೂ ಬಿಜೆಪಿಯಿಂದ ಅನೇಕ ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ಜನ ಬಯಸಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಬೇಕು. ಇಲ್ಲಿ ಶಿವಕುಮಾರ್ ಅಭ್ಯರ್ಥಿ ಎಂದು ನೀವು ಹಸ್ತದ ಗುರುತಿಗೆ ಮತ ಹಾಕಬೇಕು. ಪಕ್ಷದ ಎಲ್ಲಾ ಕಾರ್ಯಕರ್ತರು ಗ್ಯಾರಂಟಿ ಕಾರ್ಡ್ ಗಳನ್ನು ಮನೆ ಮನೆಗೆ ತಲುಪಿಸಿ.